ಉತ್ತರ ಕನ್ನಡ ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರೆತೆಯಿರುವುದನ್ನು ಮನಗಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೈದ್ಯರ ನೇಮಕಾತಿಗೆ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ. ಇದರೊಂದಿಗೆ ದಿಢೀರ್ ಹೃದಯಘಾತ ಹೆಚ್ಚಳದ ಬಗ್ಗೆ ಮಾತನಾಡಿದ ಅವರು `ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಪುನೀತ್ ಹೃದಯ ಜ್ಯೋತಿ ಯೋಜನೆ’ ವಿಸ್ತರಿಸುವುದಾಗಿ ಹೇಳಿದ್ದಾರೆ.
ಬುಧವಾರ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಅವರು ಜಿಲ್ಲಾಡಳಿತದ ಕಚೇರಿಯಲ್ಲಿ ಸಭೆ ನಡೆಸಿದರು. `ಉತ್ತರ ಕನ್ನಡ ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗುವುದು’ ಎಂಬ ಭರವಸೆ ನೀಡಿದರು.
`ಇಲ್ಲಿನ ವಿಷಯಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರಲಾಗುವುದು. ಕ್ರಿಮ್ಸಿನಲ್ಲಿರುವ ಜಿಲ್ಲಾಸ್ಪತ್ರೆಯನ್ನು ಅಲ್ಲಿಂದ ಬೇರ್ಪಡಿಸುವುದಿಲ್ಲ. ಬದಲಾಗಿ ಶಿರಸಿಯಲ್ಲಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುತ್ತದೆ’ ಎಂಬ ಮಾಹಿತಿ ನೀಡಿದರು. `ರಾಜ್ಯದಲ್ಲಿ ಖಾಲಿ ಇರುವ ಸೂಪರ್ ಸ್ಪೆಷಲಿಸ್ಟ್ ವೈದ್ಯರು ಮತ್ತು ತಜ್ಞ ವೈದ್ಯರ ನೇಮಕಾತಿಯ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದ್ದು, ಅವರಿಗೆ ಶೀಘ್ರದಲ್ಲಿ ಕೌನ್ಸಲಿಂಗ್ ಆರಂಭವಾಗಲಿದೆ. ಖಾಲಿ ಇರುವ ಸ್ಥಳಗಳಿಗೆ ವೈದ್ಯರ ಸ್ಥಳ ನಿಯುಕ್ತಿ ನಡೆಯಲಿದೆ’ ಎಂದರು.
`ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುವ ಸಾವುಗಳನ್ನು ತಡೆಗಟ್ಟಲು ಈಗಾಗಲೇ ಕೆಲವು ತಾಲೂಕು ಆಸ್ಪತ್ರೆಗಳಲ್ಲಿ ಜಾರಿಯಲ್ಲಿರುವ ಪುನೀತ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕು ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುತ್ತದೆ. ಹೃದಯ, ಎದೆ ನೋವಿನ ಕುರಿತಂತೆ ತಾಲೂಕು ಆಸ್ಪತ್ರೆಗಳಲ್ಲಿ ಇಸಿಜಿ ನಡೆಸಿ, ಚಿಕಿತ್ಸೆ ನೀಡಲಾಗುತ್ತದೆ. ಅಪಘಾತ ಸಂದರ್ಭದಲ್ಲಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವ ಹರೀಶ್ ಸಾಂತ್ವನ ಯೋಜನೆ ಜಾರಿಯಲ್ಲಿದೆ’ ಎಂದು ವಿವರಿಸಿದರು.
ಉತ್ತರ ಕನ್ನಡ ಜಿಲ್ಲಾ ನಾಗರೀಕ ಸಂಘ-ಸAಸ್ಥೆಗಳ ಒಕ್ಕೂಟ ಪ್ರತಿನಿಧಿಗಳು ಜಿಲ್ಲೆಯಲ್ಲಿನ ವೈದ್ಯಕೀಯ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ, ವೈದ್ಯಕೀಯ ಯಂತ್ರೋಪಕರಣಗಳ ಕೊರತೆಗಳ ಬಗ್ಗೆ ಸಚಿವರಿಗೆ ವಿವರಿಸಿದರು. ಈ ಸಭೆಯಲ್ಲಿ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ನೀರಜ್ ಹಾಗೂ ಕ್ರಿಮ್ಸ್ ಡೀನ್ ಡಾ ಪೂರ್ಣಿಮಾ ಮತ್ತಿತರರು ಇದ್ದರು.
Discussion about this post