`ರೋಗಿಗಳಿಗೆ ಚಿಕಿತ್ಸೆ ಹಾಗೂ ಕರ್ತವ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ವೈದ್ಯರ ವಿರುದ್ದ ಕಠಿಣ ಕ್ರಮ ಜರುಗಿಸುವೆ’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಹಿಸೀನ್ ಅವರು ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿದ ಅವರು `ವೈದ್ಯಕೀಯ ಉಪಕರಣಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಹಾಗಿಲ್ಲ’ ಎಂದು ಸೂಚನೆ ನೀಡಿದ್ದಾರೆ. `ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯವಿದ್ದರೂ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡುವ ವೈದ್ಯರನ್ನು ಅಮಾನತು ಮಾಡಲಾಗುತ್ತದೆ’ ಎಂದು ಎಚ್ಚರಿಸಿದರು. `ರೋಗಿಗಳ ಚಿಕಿತ್ಸೆಗೆ ಖರೀದಿಸುವ ವೈದ್ಯಕೀಯ ಉಪಕರಣಗಳು ನಿಗಧಿತ ಮಾನದಂಡಗಳನ್ನು ಹೊಂದಿರುವ ಬಗ್ಗೆ ಪರಿಶೀಲಿಸಬೇಕು. ಅತ್ಯಾಧುನಿಕವಾದ ಮತ್ತು ಧೀರ್ಘ ಕಾಲದ ಬಳಕೆಗೆ ಯೋಗ್ಯವಾಗಬಹುದಾದ ಉಪಕರಣಗಳನ್ನು ಖರೀದಿಸುವ ಮೂಲಕ ರೋಗಿಗಳ ಉತ್ತಮ ವೈದ್ಯಕೀಯ ಸೌಲಭ್ಯಗಳು ದೊರೆಯುವಂತೆ ಮಾಡಬೇಕು’ ಎಂದವರು ಹೇಳಿದರು.
`ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಉತ್ತಮ ರೀತಿಯ ಆರೈಕೆ ಮತ್ತು ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು. ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡಿ, ವೈದ್ಯಕೀಯ ತ್ಯಾಜ್ಯಗಳನ್ನು ಸಮರ್ಪಕ ರೀತಿಯಲ್ಲಿ ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು’ ಎಂದು ಸೂಚಿಸಿದರು. `ಪ್ರಸ್ತುತ ಹೊಸ ಕಟ್ಟಡದಲ್ಲಿ ಕೆಲವು ವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ವಿಭಾಗಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.