`ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನ ಮಂತ್ರಿ ಮಾನ್-ಧನ್ ವಂತಿಗೆ ಆಧಾರಿತ ಪಿಂಚಣಿ ಯೋಜನೆಗೆ ನೋಂದಣಿ ಮಾಡುವ ಸಂದರ್ಭದಲ್ಲಿ ಯೋಜನೆಯ ಸಂಪೂರ್ಣ ಮಾಹಿತಿಯ ಬಗ್ಗೆಯೂ ಅರಿವು ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದ್ದು, `ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸಿ ಈ ಯೋಜನೆ ವ್ಯಾಪ್ತಿಗೊಳಪಡಿಸಬೇಕು. ಯೋಜನೆಯ ಕುರಿತು ಕಾರ್ಮಿಕರಲ್ಲಿ ಅರಿವು ಮಾಡಿಸಬೇಕು’ ಎಂದು ಸೂಚಿಸಿದ್ದಾರೆ. `ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕು ಎಂದಾದರೆ ಫಲಾನುಭವಿಗಳಿಗೆ ಸಂಪೂರ್ಣ ಮಾಹಿತಿ ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಮಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು’ ಎಂದವರು ಹೇಳಿದ್ದಾರೆ.
`ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಅಕ್ಷರ ದಾಸೋಹ ಅಡುಗೆ ಸಹಾಯಕರು, ಬೀದಿ ಬದಿ ವ್ಯಾಪಾರಸ್ಥರು, ಮನರೇಗಾ ಕೂಲಿ ಕಾರ್ಮಿಕರು,ಮನೆ ಕೆಲಸದವರು, ಅಗಸರು, ಕೈಮಗ್ಗ ಕಾರ್ಮಿಕರು ಸೇರಿದಂತೆ ಅಸಂಘಟಿತ ಅರ್ಹ ಕಾರ್ಮಿಕರನ್ನು ಗುರುತಿಸಬೇಕು. ಮಾರ್ಚ್ 15ರವರೆಗೆ ನಡೆಯುವ ವಿಶೇಷ ನೋಂದಣಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಬೇಕು’ ಎಂದವರು ಸೂಚಿಸಿದ್ದಾರೆ. ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮಾತನಾಡಿ `18ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಎ.ಎಸ್.ಸಿ ಸೆಂಟರ್‌ಗಳಲ್ಲಿ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪ್ರತಿ ಸಲ್ಲಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಅವಕಾಶವಿದೆ’ ಎಂದರು. ಸಭೆಯಲ್ಲಿ ಕಾರ್ಮಿಕ ಅಧಿಕಾರಿ ವೀಣಾ ಮಾಸ್ತಿ, ಪೌರಾಯುಕ್ತ ಜಗದೀಶ ಹುಲಿಗಜ್ಜಿ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರತೀಕ ಶೆಟ್ಟಿ, ವಿವಿಧ ಕಾರ್ಮಿಕ ಸಂಘಟನೆಯ ಮುಖಂಡರು ಮತ್ತಿತರರು ಇದ್ದರು.