ಉತ್ತರ ಕನ್ನಡ ಜಿಲ್ಲೆ ಸ್ಮಶಾನ ಭೂಮಿಯ ಮೇಲೆಯೂ ಭೂ ಮಾಫಿಯಾದವರು ಕಣ್ಣು ಹಾಕಿದ್ದಾರೆ. ಸ್ಮಶಾನ ಭೂಮಿ ಅತಿಕ್ರಮಣದ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ದೂರು ಸಲ್ಲಿಕೆಯಾಗುತ್ತಿದೆ.
`ಸ್ಮಶಾನ ಭೂಮಿ ಅತಿಕ್ರಮಣಕ್ಕೆ ಅವಕಾಶ ಕೊಡಬೇಡಿ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಅಧೀನ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. `ಜಿಲ್ಲೆಯಲ್ಲಿ ಸ್ಮಶಾನಗಳಿಗೆ ಮೀಸಲಿಟ್ಟ ನಿವೇಶಗಳನ್ನು ಅತಿಕ್ರಮಣ ಮಾಡಿರುವ ಕುರಿತು ದೂರುಗಳು ಕೇಳಿ ಬರುತ್ತಿದೆ. ಈ ದೂರಿನ ಬಗ್ಗೆ ಸಮಗ್ರ ವಿಚಾರಣೆ ನಡೆಸಿ ವರದಿ ಸಲ್ಲಿಸಿ’ ಎಂದು ಅವರು ಸೂಚನೆ ನೀಡಿದ್ದಾರೆ. ಈ ವೇಳೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೆರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು `ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆಗಳನ್ನು ತಮ್ಮ ಹಂತದಲ್ಲಿ ಪರಿಶೀಲಿಸಿ ಸಮಸ್ಯೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ’ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. `ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ತಕ್ಷಣವೇ ಸಂತ್ರಸ್ತರಿಗೆ ಸ್ಪಂದಿಸಬೇಕು. ಈ ಹಿಂದೆ ನಡೆದಿರುವ ದೌರ್ಜನ್ಯದ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಬೇಕು’ ಎಂದವರು ಹೇಳಿದ್ದಾರೆ.
ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ ವೈ ಕೆ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಿತಿ ಸದಸ್ಯರು ಮತ್ತಿತರರು ಇದ್ದರು.