ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬನವಾಸಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೊಬ್ಬರು ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಿದ್ಧವೀರೇಶ ನರೇಗಲ್ ಅವರು ಬನವಾಸಿಯ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
`ಆರ್ ಎಸ್ ಎಸ್ ಕಾರ್ಯಕರ್ತರು ಕಾಂಗ್ರೆಸ್ ಪದಾಧಿಕಾರಿ ಆಗಬಾರದು’ ಎಂದು ಯಾವುದೇ ನಿಯಮವಿಲ್ಲ. ಆದರೆ, ಆರ್‌ಎಸ್‌ಎಸ್ ಹಾಗೂ ಕಾಂಗ್ರೆಸ್ ಸೈದ್ಧಾಂತಿಕವಾಗಿ ಬದ್ಧ ವಿರೋಧಿಯಾಗಿದ್ದು, ಕಾಂಗ್ರೆಸಿಗರು ಆರ್‌ಎಸ್‌ಎಸ್ ತತ್ವವನ್ನು ಒಪ್ಪುವುದಿಲ್ಲ. ಹೀಗಾಗಿ ಆರ್‌ಎಸ್‌ಎಸ್‌ನವರು ಸಹ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ತಿರಕ್ಕೆ ಸೇರಿಸುವುದಿಲ್ಲ. ಅದಾಗಿಯೂ, ಬನವಾಸಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಮಾನ್ಯ ಕಾರ್ಯಕರ್ತರೊಬ್ಬರಿಗೆ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ಅಚ್ಚರಿ ಮೂಡಿಸಿದೆ. ಇದರೊಂದಿಗೆ ಕಾಂಗ್ರೆಸ್ ವಲಯದಲ್ಲಿ ಇದಕ್ಕೆ ವಿರೋಧವೂ ವ್ಯಕ್ತವಾಗಿದೆ.
ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗಣಪತಿ ಐ ನಾಯ್ಕ ಅವರು ತಮ್ಮ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತ್‌ಗಳ ನೂತನ ಕಾಂಗ್ರೆಸ್ ಘಟಕದ ಅಧ್ಯಕ್ಷರ ಆಯ್ಕೆ ಪಟ್ಟಿ ಪ್ರಕಟಿಸಿದ್ದಾರೆ. ಇದರಲ್ಲಿ ಬನವಾಸಿ ಪಂಚಾಯತ್ ಘಟಕದ ಅಧ್ಯಕ್ಷ ಸ್ಥಾನವನ್ನು ಆರ್ ಎಸ್ ಎಸ್ ಗಣವೇಷಧಾರಿ ಹಾಗೂ ಸಂಘದ ಸಕ್ರಿಯ ಕಾರ್ಯಕರ್ತರಾಗಿರುವ ಸಿದ್ಧವೀರೇಶ ಮೇಘರಾಜ ನರೇಗಲ್ ಅವರಿಗೆವಹಿಸಿದ್ದಾರೆ. ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಹುದ್ದೆ ನೀಡಿದ ಕಾರಣ ಆ ಭಾಗದ ಕಾಂಗ್ರೆಸಿಗರು ಗರಂ ಆಗಿದ್ದಾರೆ. `ವರ್ಷಗಳ ಕಾಲ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ತಮ್ಮದೇ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಈ ನೇಮಕಾತಿಯಲ್ಲಿ ಸಂಪೂರ್ಣವಾಗಿ ಕಡೆಗಣಿಸಲಾಗಿದೆ’ ಎಂದವರು ಅಸಮಧಾನವ್ಯಕ್ತಪಡಿಸಿದ್ದಾರೆ.