`ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿರುವ ನೀರು ಕುಡಿಯಲು ಯೋಗ್ಯವೇ? ಎಂದು ಪರಿಶೀಲಿಸಬೇಕು’ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಅವರು ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು `ಮಳೆಗಾಲ ಪ್ರಾರಂಭವಾಗುವ ಮುನ್ನ ಕುಡಿಯುವ ನೀರಿನ ಮೂಲಗಳು ಮತ್ತು ನೀರಿನ ಮಾದರಿಗಳನ್ನು ಪರೀಕ್ಷಿಸಬೇಕು. ನೀರು ಕಲುಷಿತಗೊಳ್ಳದಂತೆ ಮುಂಜಾಗ್ರತಾ ಕ್ರಮ ಜರುಗಿಸಬೇಕು’ ಎಂದು ನಿರ್ದೇಶಿಸಿದ್ದಾರೆ. `ಶೀಘ್ರದಲ್ಲಿ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳು ಪ್ರಾರಂಭವಾಗುತ್ತಿದ್ದು, ಇಲ್ಲಿರುವ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷಿಸಬೇಕು. ಕುಡಿಯಲು ನೀರು ಯೋಗ್ಯವಾಗಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಎಲ್ಲಾ ಶಾಲೆ, ಅಂಗನವಾಡಿ ಮತ್ತು ವಸತಿ ನಿಲಯಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು’ ಎಂದಿದ್ದಾರೆ.
`ಇಲಾಖೆಗಳ ನಡುವೆ ಸಮನ್ವಯತೆ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಇಲಾಖೆಗಳ ನಡುವಿನ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು’ ಎಂದವರು ಹೇಳಿದ್ದಾರೆ. `ಜೆಜೆಎಂ ಕಾಮಗಾರಿಗಳು ಪೂರ್ಣಗೊಂಡಿರುವ ಕಡೆ ಹೆಸ್ಕಾಂ ವತಿಯಿಂದ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕುಡಿಯುವ ನೀರಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಹಾಗೂ ಟಾಸ್ಕ್ ಪೊರ್ಸ್ ಸಮಿತಿಗೆ ಕಾಮಗಾರಿಗಳ ಕುರಿತು ಪ್ರಸ್ತಾವನೆ ಸಲ್ಲಿಸುವ ಸಂದರ್ಭದಲ್ಲಿ ಸರಿಯಾದ ಮಾಹಿತಿ ಒಳಗೊಂಡ ಸಮಗ್ರ ಪ್ರಸ್ತಾವನೆ ಸಲ್ಲಿಸಬೇಕು’ ಎಂದವರು ಸೂಚಿಸಿದ್ದಾರೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅಲ್ಲಾ ಭಕ್ಷ್, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜನೀಯರ್ ಎಚ್ ಸತ್ಯಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರು ಇದ್ದರು.