ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೊರಬಾ ಗ್ರಾಮದಲ್ಲಿ ಭಾರೀ ಗಾಳಿ ಹಾಗೂ ಮಳೆಯ ಅಬ್ಬರಕ್ಕೆ ಮನೆಯೊಂದರ ಮೇಲೆ ದೊಡ್ಡ ಮರ ಬಿದ್ದು ಮನೆಗೆ ವ್ಯಾಪಕ ಹಾನಿಯಾಗಿದೆ.
ಗ್ರಾಮದ ರಾಜು ರಾಮಚಂದ್ರ ನಾಯ್ಕ ಅವರಿಗೆ ಸೇರಿದ ಮನೆಯ ಮೇಲ್ಛಾವಣಿಯ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಮನೆಯ ಛಾವಣಿ ಕುಸಿದಿದ್ದು, ಮನೆಯೊಳಗಿದ್ದ ಗೃಹೋಪಯೋಗಿ ವಸ್ತುಗಳಿಗೂ ಹಾನಿಯಾಗಿದೆ. ಘಟನೆಯ ವೇಳೆ ಮನೆಯಲ್ಲಿದ್ದ ಕುಟುಂಬ ಸದಸ್ಯರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಮರ ಬಿದ್ದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡು ಕುಟುಂಬ ಸದಸ್ಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಮನೆ ವಾಸಕ್ಕೆ ಅಯೋಗ್ಯವಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಕುಟುಂಬವು ಸದ್ಯ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದೆ.
ಘಟನೆಯಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತವು ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯಲ್ಲಿ ಹಲವೆಡೆ ಮರಗಳು ಉರುಳಿ ಬೀಳುವ ಹಾಗೂ ಆಸ್ತಿ ಹಾನಿಯ ಘಟನೆಗಳು ವರದಿಯಾಗುತ್ತಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.