ಜನರ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು `ಪ್ರಜಾ ಸೇವೆ’ ಹೆಸರಿನಲ್ಲಿ ಹೊಸ ಯೋಜನೆ ರೂಪಿಸಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಪ್ರದೇಶಗಳಿಗೆ ಭೇಟಿ ನೀಡಿ, ಜನರ ಜೊತೆ ಬೆರೆಯುವುದನ್ನು ಅವರು ಕಡ್ಡಾಯ ಮಾಡಿದ್ದಾರೆ.
`ಮುಖ್ಯಮಂತ್ರಿಗಳ ನಿರ್ದೇಶನದಂತೆ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಅವರು ಸೂಚನೆ ನೀಡಿದ್ದಾರೆ. ಮಂಗಳವಾರ ಸರ್ಕಾರಿ ನೌಕರರು ಮತ್ತು ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆದಿದ್ದು, ಅದಾದ ನಂತರ ಡೀಸಿ ವಿವಿಧ ಸೂಚನೆ ನೀಡಿದ್ದಾರೆ. `ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ನಿಯೋಜಿತ ಕೇಂದ್ರಸ್ಥಾನದಲ್ಲೇ ಕಡ್ಡಾಯವಾಗಿವಾಸಿಸಬೇಕು. ಕೇಂದ್ರಸ್ಥಾನದಿoದ ಹೊರಗಡೆ ವಾಸವಿದ್ದು, ಕರ್ತವ್ಯ ನಿರ್ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದವರು ಎಚ್ಚರಿಸಿದ್ದಾರೆ.
`ಅಗಸ್ಟ್ 15ರೊಳಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹೆಸರು, ಕಚೇರಿ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ವಾಸದ ವಿಳಾಸದ ವಿವರಗಳನ್ನು ಕ್ರೋಢೀಕರಿಸಿ ಅಧಿಕೃತ ಕೈಪಿಡಿ ಸಿದ್ಧಪಡಿಸಲಾಗುತ್ತದೆ’ ಎಂದವರು ಮಾಹಿತಿ ನೀಡಿದ್ದಾರೆ. `ಕಚೇರಿಗಳಲ್ಲಿ ಯಾವುದೇ ರೀತಿಯ ಭ್ರಷ್ಠಾಚಾರಕ್ಕೆ ಅವಕಾಶ ನೀಡಬಾರದು. ಭ್ರಷ್ಠಾಚಾರದ ಕುರಿತು ದೂರು ನೀಡಲು ಸಾರ್ವಜನಿಕರಿಗೆ ಕಾಣುವಂತೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಹಾಗೂ ಅಗತ್ಯ ಮಾಹಿತಿಯ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಸಾರ್ವಜನಿಕರಿಂದ ಬರುವ ದೂರುಗಳ ಮೇಲೆ ಮುಖ್ಯಮಂತ್ರಿಗಳ ಕಚೇರಿಯಿಂದಲೂ ನಿಗಾ ವಹಿಸಲಾಗುತ್ತಿದ್ದು, ಕರ್ತವ್ಯ ಲೋಪ ಕಂಡುಬoದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ’ ಎಮದವರು ಹೇಳಿದ್ದಾರೆ.
`ಸಾರ್ವಜನಿಕರ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಇಲಾಖೆ ರೂಪಿಸಲಾಗಿದ್ದು, ಹಿರಿಯ ಅಧಿಕಾರಿಗಳ ತಂಡ ಇದರ ಮೇಲ್ವಿಚಾರಣೆ ನಡೆಸಲಿದೆ. ಜಿಲ್ಲೆ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಜನಸ್ಪಂದನ ಸಭೆ ನಡೆಸಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಬೇಕು’ ಎಂದಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಅವರು ಮಾತನಾಡಿ `ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೀಡುವ ನಿರ್ದೇಶನ ಮತ್ತು ಸೂಚನೆಗಳು ಅವರ ಕೆಳಹಂತದ ಸಿಬ್ಬಂದಿಗೂ ತಲುಪಿ, ಅವುಗಳ ಸಮರ್ಪಕ ಅನುಷ್ಠಾನ ಆಗಬೇಕು’ ಎಂದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಎಲ್ಲಾ ಜಿಲ್ಲಾ ಮಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.