`ಮಂಗಳೂರನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಅಭಿವೃದ್ಧಿಗೆ ಸುಮಾರು 10 ಸಾವಿರ ಕೋಟಿ ರೂ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ’ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ. ಶನಿವಾರ ಕುಮಟಾಗೆ ಆಗಮಿಸಿದ್ದ ಅವರು `ಕರಾವಳಿ ಭಾಗದ ಅಭಿವೃದ್ಧಿಗಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ಸರ್ಕಾರ ಹಾಗೂ ಸಾರ್ವಜನಿಕ ಸಹಭಾಗಿತ್ವದ ಯೋಜನೆಗಳು ಇದರಲ್ಲಿ ಸೇರಿವೆ’ ಎಂದರು.
`ವಿಮಾನ ನಿಲ್ದಾಣ, ಬಂದರು ಅಭಿವೃದ್ಧಿ ಪ್ರವಾಸೋದ್ಯಮದ ಬೆಳವಣಿಗೆಗೆ ಉತ್ತಮ ಸಾರಿಗೆ ವ್ಯವಸ್ಥೆ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರೂ 250ರಿಂದ 260 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ಸಮುದ್ರ ಮದ್ಯದ ದ್ವಿಪಗಳ ಸದ್ಬಳಕೆ ಹಾಗೂ ಹೊಸ ಬಂದರುಗಳ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು. `ಕಸ್ತೂರಿರಂಗನ್ ವರದಿ ಜಾರಿಗೆ ಸಂಬAಧಿಸಿದAತೆ ಕರಾವಳಿ ಜನರ ಅಭಿಪ್ರಾಯ ಹಾಗೂ ಹಿತಾಸಕ್ತಿಯನ್ನು ಪರಿಗಣಿಸಲಾಗುವುದು. ಈ ಕುರಿತು ಸೋಮವಾರ ಇಡೀ ದಿನ ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಸಮಯ ಕಾಯ್ದಿರಿಸಲಾಗಿದೆ. ಪಕ್ಷಾತೀತವಾಗಿ ವಿರೋಧ ಪಕ್ಷದ ನಾಯಕರ ಸಲಹೆಗಳನ್ನು ಪಡೆಯಲಾಗುವುದು’ ಎಂದು ಸಚಿವರು ಹೇಳಿದರು. `
`ರಾಜ್ಯದಲ್ಲಿ ಕಳೆದ 50 ವರ್ಷಗಳಲ್ಲೇ ಕಾಣದಂತಹ ಭೀಕರ ಬರಗಾಲ ಎದುರಾಗಿದೆ ಎಂದು ತಿಳಿಸಿದ ಸಚಿವರು, 200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಕುಡಿಯುವ ನೀರು, ಬೆಳೆ ನಷ್ಟ ಹಾಗೂ ಉದ್ಯೋಗ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಎರಡು ದಿನಗಳ ಕಾಲ ಸುದೀರ್ಘ ಚರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು’ ಎಂದರು. `ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅರ್ಜಿಗಳಿಗೆ ತಕ್ಷಣ ಸ್ಪಂದಿಸಿ, ಗರಿಷ್ಟ 15 ದಿನಗಳೊಳಗೆ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಖ್ಯಮಂತ್ರಿಗಳ ಆಶಯದಂತೆ ಸರ್ಕಾರದ ಯೋಜನೆಗಳನ್ನು ಜನರಿಗೆ ಯಶಸ್ವಿಯಾಗಿ ತಲುಪಿಸಲು ಸರ್ಕಾರ ಬದ್ಧವಾಗಿದೆ’ ಎಂದು ಸ್ಪಷ್ಟಪಡಿಸಿದರು.