ಕಾರವಾರದ ಅಸ್ನೋಟಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಮುಖ್ಯಾಧ್ಯಾಪಕಿ ಶಾರದಾ ನಾಯ್ಕ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ಕಾಯಕ ಗುರುರತ್ನ ಪ್ರಶಸ್ತಿ ಲಭಿಸಿದೆ. ಧಾರವಾಡದ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು ವಿಶ್ವ ಶಿಕ್ಷಕರ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿ ನೀಡುತ್ತಿದ್ದು, ಈ ಬಾರಿ ಶಾರದಾ ನಾಯ್ಕ ಅವರ ಸಾಧನೆಯನ್ನು ಗುರುತಿಸಿ, ಗೌರವಿಸಲಾಗುತ್ತಿದೆ.
ಶಾರದಾ ನಾಯ್ಕ ಅವರು ಗ್ರಾಮೀಣ ಭಾಗದಲ್ಲಿ ಸಲ್ಲಿಸಿದ ಅತ್ಯುತ್ತಮ ಶೈಕ್ಷಣಿಕ ಸೇವೆ, ಶಿಸ್ತುಬದ್ಧ ಆಡಳಿತ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಾರದಾ ನಾಯ್ಕ ಅವರು ಶಿಕ್ಷಕ ವೃತ್ತಿಯನ್ನು ಕೇವಲ ಉದ್ಯೋಗವೆಂದು ಭಾವಿಸದೆ, ಅದನ್ನು ಕಾಯಕವೆಂದು ಪರಿಗಣಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಶಿಸ್ತು ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಅವರು ವಿಶೇಷ ಕಾಳಜಿವಹಿಸಿದ್ದಾರೆ.
ಪಾಲಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಅವರು ಶಾಲೆಯ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆ ಸಹ ಶಿಕ್ಷಕರು ಮತ್ತು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಪ್ರಶಸ್ತಿ ಲಭಿಸಿರುವುದಕ್ಕೆ ಅಸ್ನೋಟಿ ಗ್ರಾಮಸ್ಥರು, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮತ್ತು ಪಾಲಕರು ಹರ್ಷ ವ್ಯಕ್ತಪಡಿಸಿ, ಶಾರದಾ ನಾಯ್ಕ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು 29 ನವೆಂಬರ್ 2026ರಂದು ಬೆಳಗ್ಗೆ 9 ಗಂಟೆಗೆ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದಲ್ಲಿ ನಡೆಯಲಿದೆ.