ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಚಿಕ್ಕ ಮಕ್ಕಳು, ವೃದ್ಧರನ್ನು ಗುರಿಯಾಗಿರಿಸಿಕೊಂಡು ಬೀದಿ ನಾಯಿಗಳ ಆಕ್ರಮಣ ನಡೆಯುತ್ತಿದೆ. ಈ ಸಮಸ್ಯೆ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಡೀಸಿ ಕೆ ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ.
`ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲು ಅಗತ್ಯ ಕ್ರಮ ಜರುಗಿಸಬೇಕು’ ಎಂದವರು ಸೂಚಿಸಿದರು. `ಈಗಾಗಲೇ ಮಿಷನ್ ರೇಬಿಸ್ ಕಾರ್ಯಕ್ರಮದಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆಯನ್ನು ಕೈಗೊಂಡಿದ್ದು, ಶಿರಸಿಯಲ್ಲಿ 1580 ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲಾಗಿದೆ. ಕಾರವಾರದಲ್ಲಿಯೂ ಈ ಕಾರ್ಯ ಪ್ರಗತಿಯಲ್ಲಿದೆ. ಇದೇ ರೀತಿಯಲ್ಲಿ ಜಿಲ್ಲೆಯ ಉಳಿದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಈ ಕಾರ್ಯ ಮುಗಿಸಬೇಕು’ ಎಂದು ಸೂಚಿಸಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಸಹ ಈ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ತಿಳಿಸಿದರು.
ಬೀದಿ ನಾಯಿಗಳ ಕಡಿತಕ್ಕೆ ಸೂಕ್ತ ಚಿಕಿತ್ಸೆ ನೀಡಲು ಔಷಧಗಳ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. `ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ಔಷಧ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು’ ಎಂದರು. `ಪಶು ಸಂಜೀವಿನಿ ಆಂಬುಲೈನ್ಸ್ ನ ಉಚಿತ ದೂರವಾಣಿ ಸಂಖ್ಯೆ 1962ಗೆ ರೈತರು ಮತ್ತು ಜಾನುವಾರು ಮಾಲೀಕರು ಕರೆ ಮಾಡಿದಾಗ ಕೆಲವೊಮ್ಮೆ ಕಾಲ್ ಡ್ರಾಪ್ ಆಗುತ್ತಿರುವ ಕುರಿತು ದೂರುತಿದ್ದು, ಕರೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳು ಕಂಡುಬಾರದAತೆ ನೋಡಿಕೊಳ್ಳಬೇಕು. ಕರೆಯಿಂದ ಸ್ವೀಕರಿಸುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಬಗ್ಗೆ ಸೇವಾ ಪೂರೈಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು’ ಎಂದು ನಿರ್ದೇಶನ ನೀಡಿದರು.
`ಈ ವರ್ಷ ಏಪ್ರಿಲಿನಿಂದ ಸೆಪ್ಟಂಬರಿನವರೆಗೆ ಪಶು ಸಂಜೀವಿನಿ ಆಂಬುಲೈನ್ಸ್ ಮೂಲಕ ಸ್ವೀಕರಿಸಿರುವ 7493 ಕರೆಗಳಿಗೆ ಸ್ಪಂದಿಸಿ ಪಶುಗಳಿಗೆ ಚಿಕಿತ್ಸೆ ನೀಡಲಾಗಿದೆ. ಆಂಬುಲೈನ್ಸ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲೆಯಲ್ಲಿ ಆಂಬುಲೈನ್ಸ್ ಸೇವೆ ನೀಡುತ್ತಿರುವ ಸಂಸ್ಥೆಯ ಸಂಯೋಜಕರಿಗೆ ಸೂಚನೆ ನೀಡಲಾಗುತ್ತದೆ’ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ ಮೋಹನ್ ಕುಮಾರ್ ತಿಳಿಸಿದರು. ಕಾಲುಬಾಯಿ ಜ್ವರದ ವಿರುದ್ಧದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳುವಂತೆ ಮತ್ತು ಇದೇ ಅವಧಿಯಲ್ಲಿ ಚರ್ಮಗಂಟು ರೋಗದ ವಿರುದ್ಧ ಲಸಿಕೆಯನ್ನು ಕೂಡಾ ಒಟ್ಟಿಗೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಈಗಾಗಲೇ ನಿರ್ಮಾಣವಾಗಿರುವ ಗೋಶಾಲೆಗಳ ನಿರ್ವಹಣೆ ಮತ್ತು ಬೀಡಾಡಿ ದನಗಳ ನಿಯಂತ್ರಣ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು.
ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾನೀರಜ್, ಪೌರಾಯುಕ್ತ ಜಗದೀಶ್ ಹುಲಗೆಜ್ಜಿ ಇದ್ದರು.