ಮಾಹಿತಿ ಹಕ್ಕು ಕಾಯ್ದೆಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, RTI ಅಡಿ ಸಲ್ಲಿಸಿದ ಅರ್ಜಿಗಳನ್ನು ಸಹ ಸಕಾಲ ಸೇವೆಯ ಅಡಿಗೆ ತಂದಿದೆ. ಜೊತೆಗೆ ಗ್ರಾಮ ಒನ್, ಕರ್ನಾಟಕ ಒನ್ ಸೇರಿ ಹಳ್ಳಿ ಹಳ್ಳಿಯಲ್ಲಿರುವ ಗ್ರಾಮ ಒನ್ ಕೇಂದ್ರದ ಮೂಲಕವೂ ಜನ RTI ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಿದೆ.
ಇನ್ಮುಂದೆ, ಸರ್ಕಾರಿ ಕಚೇರಿಯಲ್ಲಿ ಭೌತಿಕವಾಗಿ ಸ್ವೀಕರಿಸಿದ ಆರ್ಟಿಐ ಅರ್ಜಿಯನ್ನು 2 ದಿನದ ಒಳಗೆ ಆರ್ಟಿಐ ಆನ್ಲೈನ್ ಪೋರ್ಟಲ್ ಮೂಲಕ ದಾಖಲಿಸುವುದು ಕಡ್ಡಾಯವಾಗಿದೆ. ಮೊದಲನೇ ಮೇಲ್ಮನವಿಯನ್ನು ಪ್ರಾಧಿಕಾರವೂ 7 ಕೆಲಸದ ದಿನಗಳ ಒಳಗೆ ಹಾಗೂ ಎರಡನೇ ಮೇಲ್ಮನವಿಯನ್ನು ಪ್ರಾಧಿಕಾರ ಮತ್ತೆ 7 ಕೆಲಸದ ದಿನಗಳಲ್ಲಿ ಮುಗಿಸಬೇಕು ಎಂದು ಸೂಚಿಸಲಾಗಿದೆ. ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಕೆಯಾದ ಎಲ್ಲಾ ಅರ್ಜಿಯೂ ಆನ್ಲೈನ್ ಮೂಲಕವೇ ನೋಡೆಲ್ ಅಧಿಕಾರಿಗೆ ವರ್ಗವಾಗಲಿದೆ. ಸರ್ಕಾರದ ಈ ಹೊಸ ಆದೇಶವು ಕರ್ನಾಟಕ ಸರ್ಕಾರದ ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು ಹಾಗೂ ಸಂಸ್ಥೆಗಳಿಗೆ ತಕ್ಷಣದಿಂದಲೇ ಅನ್ವಯವಾಗಲಿದೆ.
`ಈ ಮುಂಚೆ ಭೌತಿಕವಾಗಿ ನೀಡಿದ ಆರ್ಟಿಐ ಅರ್ಜಿಗಳ ಪ್ರಕ್ರಿಯೆ ವಿಳಂಬವಾಗುತ್ತಿತ್ತು. ಈಗ ಇದನ್ನು ಸಕಾಲ ಕಾಯ್ದೆಯಡಿ ಸೇರಿಸಿರುವುದರಿಂದ, ಅಧಿಕಾರಿಗಳು ನಿಗದಿತ 2 ದಿನಗಳಲ್ಲಿ ಆನ್ಲೈನ್ಗೆ ಸೇರಿಸುವುದು ಕಡ್ಡಾಯವಾಗಿದ್ದು, ಸಾರ್ವಜನಿಕರಿಗೆ ತಮ್ಮ ಅರ್ಜಿಗಳ ಸ್ಥಿತಿಗತಿಯನ್ನು ಆನ್ಲೈನ್ ಮೂಲಕ ಸುಲಭವಾಗಿ ವೀಕ್ಷಿಸಲು ಹಾಗೂ ಶೀಘ್ರ ಮಾಹಿತಿ ಪಡೆಯಲು ಅನುಕೂಲವಾಗಲಿದೆ’ ಎಂದು ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಹೇಳಿದ್ದಾರೆ.
ಇನ್ನೂ, ನಾಗರಿಕರಿಗೆ ಮಾಹಿತಿ ಹಕ್ಕು ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರ ಮತ್ತೆರಡು ಪ್ರಮುಖ ಹಾಗೂ ನೂತನ ನಿರ್ಧಾರ ಮಾಡಿದೆ. ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ (ಕಾಗದದ ರೂಪದ) ಆರ್ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್ಟಿಐ ಆನ್ಲೈನ್ ಪೋರ್ಟಲ್ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಇದನ್ನು ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ರ ಅಡಿಯಲ್ಲಿ ಖಾತ್ರಿ ಸೇವೆಯಾಗಿ ಅಧಿಸೂಚಿಸಲಾಗಿದೆ. ಇದರಿಂದ ಪ್ರತಿಯೊಬ್ಬ ಅರ್ಜಿದಾರರಿಗೂ ಆನ್ಲೈನ್ ನೋಂದಣಿ ಸಂಖ್ಯೆ ದೊರೆಯಲಿದ್ದು, ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಲು ಅನುಕೂಲವಾಗಲಿದೆ. ಇದರಿಂದ ಅರ್ಜಿಗಳು ಕಳೆದುಹೋಗುವ ಅಥವಾ ನಿರ್ಲಕ್ಷ್ಯಕ್ಕೆ ಒಳಗಾಗುವ ಸಾಧ್ಯತೆ ಇರುವುದಿಲ್ಲ. ನಿಯಮಿತ ದಿನಗಳಲ್ಲಿ ಪೋರ್ಟಲ್ನಲ್ಲಿ ದಾಖಲಿಸದಿದ್ದರೆ ನಾಗರಿಕರು ಸಕಾಲ ಕಾಯ್ದೆಯಡಿ ಪರಿಹಾರ ವೆಚ್ಚ ಪಡೆಯುವ ಅವಕಾಶವನ್ನು ಕಲ್ಪಿಸಲಾಗಿದೆ.
ಇದರೊಂದಿಗೆ ಇಂಟರ್ನೆಟ್ ಅಥವಾ ಕಂಪ್ಯೂಟರ್ ಬಳಕೆ ತಿಳಿಯದ ಸಾರ್ವಜನಿಕರನು ದೃಷ್ಟಿಯಲ್ಲಿಟ್ಟುಕೊಂಡು, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್ಲೈನ್ ಆರ್ಟಿಐ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ. ನಾಗರಿಕರು ತಮ್ಮ ಸಮೀಪದ ಕೇಂದ್ರಕ್ಕೆ ತೆರಳಿ ಸಿಬ್ಬಂದಿಯ ನೆರವಿನಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ನಿಗದಿತ ಆರ್ಟಿಐ ಶುಲ್ಕ ಮತ್ತು ಕೇಂದ್ರದ ನಾಮಮಾತ್ರ ಸೇವಾ ಶುಲ್ಕವನ್ನು ಪಾವತಿಸಬೇಕು. ಸ್ಥಳದಲ್ಲೇ ಆನ್ಲೈನ್ ಸ್ವೀಕೃತಿಯೂ ಸಿಗಲಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದ ‘ಗ್ರಾಮ ಒನ್’ ಕೇಂದ್ರಗಳ ಮೂಲಕ ಈಗ ಹಳ್ಳಿಯ ಪ್ರತಿಯೊಬ್ಬ ನಾಗರಿಕರಿಗೂ ಆನ್ಲೈನ್ ಆರ್ಟಿಐ ಸೌಲಭ್ಯ ತಲುಪಲಿದೆ.