`ಮಹಿಳೆಯರು ಕೆಲಸ ಮಾಡುವ ಎಲ್ಲಾ ಸ್ಥಳದಲ್ಲಿಯೂ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯ’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿ ಚೌಧರಿ ಅವರು ಹೇಳಿದ್ದಾರೆ. ಕಾರವಾರದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ 2013ರ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು `ಮಹಿಳೆಯರು ಎಲ್ಲಾ ಸ್ಥಳಗಳಲ್ಲಿಯೂ ಸುರಕ್ಷಿತವಾಗಿರಬೇಕು. ಹೀಗಾಗಿ ಇಂಥ ಸಮಿತಿ ರಚನೆಗೆ ಒತ್ತು ಕೊಡಬೇಕು’ ಎಂದು ಸೂಚಿಸಿದರು.
`ಸರ್ಕಾರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತಂದಿದ್ದು, ಮಹಿಳೆಯರು ಕೆಲಸ ನಿರ್ವಹಿಸುವ ಎಲ್ಲಾ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲೂ ಈ ಸಮಿತಿಗಳನ್ನು ರಚಿಸಬೇಕು. ನಿಗಧಿತವಾಗಿ ಸಭೆಗಳನ್ನು ನಡೆಸಿ ಮಹಿಳೆಯರ ಮೇಲೆ ಯಾವುದೇ ರೀತಿಯ ದೌರ್ಜನ್ಯಗಳು ನಡೆಯದಂತೆ ನೋಡಿಕೊಳ್ಳಬೇಕು’ ಎಂದರು. `ಈ ಕಾಯ್ದೆ ಜಾರಿಗೆ ಬಂದು 13 ವರ್ಷಗಳಾದರೂ ಇನ್ನೂ ಅನೇಕ ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಈ ಸಮಿತಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ’ ಎಂದವರು ಅಸಮಧಾನ ವ್ಯಕ್ತಪಡಿಸಿದರು. ಈ ಕಾಯಿದೆಯ ಕುರಿತಂತೆ ವ್ಯಾಪಕ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಸುವಂತೆ ಸೂಚಿಸಿದರು.
`ಮಹಿಳೆಯರು ತಾವು ಕೆಲಸ ನಿರ್ವಹಿಸುವ ಸ್ಥಳದಲ್ಲಿ ಯಾವುದೇ ರೀತಿಯ ದೌರ್ಜನ್ಯಗಳಾದಲ್ಲಿ ಯಾವುದೇ ಭಯಪಡದೇ ಅದನ್ನು ಪ್ರಶ್ನಿಸಬೇಕು. ಮತ್ತು ಈ ಸಮಿತಿಗೆ ದೂರು ನೀಡಬೇಕು. ಮಹಿಳೆಯರು ನೀಡುವ ದೂರುಗಳನ್ನು ಸಮಿತಿಯಲ್ಲಿ ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಸಿ ಸಂತ್ರಸ್ಥ ಮಹಿಳೆಗೆ ನ್ಯಾಯ ಒದಗಿಸಬೇಕು’ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಜಿಲ್ಲಾಧಿಕಾರಿ ಹರ್ಷಲ್ ಬೊಯರ್, ಜಿ.ಪಂ. ಸಿಇಓ ಡಾ.ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ, ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಸಂಪನ್ಮೂಲ ವ್ಯಕ್ತಿ ಚಂದ್ರಿಕಾ ಅವರು ಇದ್ದರು.