ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿ ಗಾಳಿ ಮುಂದುವರೆದಿದ್ದು, ಇನ್ನೂ ನಾಲ್ಕು ದಿನ ವಾತಾವರಣ ಹಾಗೇ ಮುಂದುವರೆಯುವ ಲಕ್ಷಣಗಳಿವೆ. ಬಿಸಿಲು ಹಾಗೂ ಒಣ ಹವೆಯ ಪ್ರಭಾವದಿಂದ ಜನರ ಆರೋಗ್ಯದಲ್ಲಿಯೂ ವ್ಯತ್ಯಾಸವಾಗುತ್ತಿದೆ. ಸೂರ್ಯನ ಶಾಖದಿಂದ ರಕ್ಷಿಸಿಕೊಳ್ಳುವುದರ ಜೊತೆ ಆರೋಗ್ಯ ಕಾಪಾಡಿಕೊಳ್ಳುವುದಕ್ಕಾಗಿ ಜಿಲ್ಲಾಡಳಿತ ಜನರಿಗೆ ವಿವಿಧ ಸೂಚನೆ ರವಾನಿಸಿದೆ.
`ನಿತ್ಯ ಮಧ್ಯಾಹ್ನ 12ಗಂಟೆಯಿoದ 3 ಗಂಟೆ ಅವಧಿಯಲ್ಲಿ ಶಾಖ ಹೆಚ್ಚಾಗುತ್ತಿರುವುದರಿಂದ ಆ ಅವಧಿಯಲ್ಲಿ ಬಿಸಿಲಿಗೆ ಹೋಗುವುದನ್ನು ತಪ್ಪಿಸಿ’ ಎಂದು ಜಿಲ್ಲಾಡಳಿತ ಮನವಿ ಮಾಡಿದೆ. `ಬಾಯಾರಿಕೆ ಇಲ್ಲದಿದ್ದರೂ ಪ್ರತಿಯೊಬ್ಬರು ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕ, ಛತ್ರಿ, ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸಬೇಕು’ ಎಂದು ಸಲಹೆ ನೀಡಿದೆ. `ಮಧ್ಯಾಹ್ನ 12 ರಿಂದ 3ರವರೆಗೆ ಶ್ರಮದಾಯಕ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಬೇಕು. ಪೂರ್ವಾಹ್ನ 11 ಗಂಟೆಯಿAದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು, ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ ವ್ಯವಸ್ಥೆ ಮಾಡಬೇಕು’ ಎಂದು ಸೂಚಿಸಿದೆ.
`ಉತ್ತಮ ಗಾಳಿಯಾಡುವ ವ್ಯವಸ್ಥೆ ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಪ್ರಯಾಣಿಸುವಾಗ ನೀರನ್ನು ಜೊತೆಯಲ್ಲಿ ಕೊಂಡೊಯ್ಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಸೇವಿಸದಿರಿ’ ಎಂದು ಸಲಹೆ ನೀಡಿದೆ. `ಬಿಸಿ ಆಹಾರವನ್ನು ಸೇವಿಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಬಿಡುವುದು ಸರಿಯಲ್ಲ. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯಬೇಕು’ ಎಂದು ಸೂಚಿಸಲಾಗಿದೆ. `ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಬಳಸಬೇಕು. ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್ ಹಣ್ಣುಗಳನ್ನು, ತರಕಾರಿ, ಸೊಪ್ಪು, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು. ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. ಮನೆಯನ್ನು ತಂಪಾಗಿರಿಸಲು ಪರದೆ, ಶಟರ್ ಅಥವಾ ಸನ್‌ಶೇಡ್‌ಗಳನ್ನು ಬಳಸಬೇಕು’ ಎಂದು ಸೂಚಿಸಲಾಗಿದೆ.
`ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸಬೇಕು ಹಾಗೂ ದೇಹದ ಉಷ್ಣತೆೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕಬೇಕು. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓ.ಆರ್.ಎಸ್, ನಿಂಬೆ ಪಾನಕ ನೀಡಬೇಕು. ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡಬೇಕು. ರೋಗ ಲಕ್ಷಣಗಳು ಉಲ್ಬಣಗೊಂಡಲ್ಲಿ ಅಥವಾ ದೀರ್ಘಕಾಲದವರೆಗೆ ಇದ್ದಲ್ಲಿ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು. ಈ ಸಂದರ್ಭದಲ್ಲಿ ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯಗಳನ್ನು ನೀಡಬಾರದು’ ಎಂದು ತಿಳಿಸಲಾಗಿದೆ. `ಅತೀ ಹೆಚ್ಚು ತಾಪಮಾನದಿಂದ ಬಳಲಿಕೆಗೆ ತುತ್ತಾದವರ ಮೇಲೆ ತಂಪಾದ ಒದ್ದೆ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿರಿಸಬೇಕು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸಬೇಕು. ಅತೀ ಹೆಚ್ಚು ತಾಪಮಾನದಿಂದ ಉದ್ಭವಿಸಬಹುದಾದ ರೋಗಲಕ್ಷಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದು ಸೂಚಿಸಲಾಗಿದೆ.