ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಬಸ್ಸು ಅಂಕೋಲಾದಲ್ಲಿ ಪಲ್ಟಿಯಾಗಿದೆ. ಪರಿಣಾಮ ಪ್ರಯಾಣಿಕರೊಬ್ಬರು ಸಾವನಪ್ಪಿದ್ದಾರೆ. ಜೊತೆಗೆ 21 ಜನ ಗಾಯಗೊಂಡಿದ್ದಾರೆ.
36 ಪ್ರಯಾಣಿಕರಿದ್ದ ಬಸ್ಸು ವೇಗವಾಗಿ ಸಂಚರಿಸಿದ್ದು, ಅದೇ ಅಪಘಾತಕ್ಕೆ ಕಾರಣ. ಬಸ್ ರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಒಳಗಿದ್ದ ಪ್ರಯಾಣಿಕರು ಕಂಗಾಲಾದರು. ಗಂಭೀರ ಗಾಯಗೊಂಡ ಒಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆದರೂ ಪ್ರಯೋಜನ ಆಗಲಿಲ್ಲ.
ಬಸ್ಸಿನ ಒಳಗಿದ್ದ ಪ್ರಯಾಣಿಕರನ್ನು ಸ್ಥಳೀಯರು ಕಿಟಕಿ ಗಾಜುಗಳನ್ನು ಒಡೆದು ಒಳಗಿದ್ದ ಪ್ರಯಾಣಿಕರನ್ನು ಹೊರತೆಗೆದರು. ಗಾಯಗೊಂಡ 21 ಮಂದಿಯನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ 15 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಅಪಘಾತದ ರಭಸಕ್ಕೆ ಬಸ್ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದರಿಂದ ಯಲ್ಲಾಪುರ–ಅಂಕೋಲಾ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಘಟನಾ ಸ್ಥಳಕ್ಕೆ ಧಾವಿಸಿದ ಅಂಕೋಲಾ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್ ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಹರಸಾಹಸ ಪಟ್ಟರು.