ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜಿನಲ್ಲಿ ನೀಟ್ ಮರು ಪರೀಕ್ಷೆ ಜೂ 21ರಂದು ನಡೆಯಲಿದೆ. `ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆ ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು’ ಎಂದು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷಿಪ್ರಿಯಾ ನಿರ್ದೇಶನ ನೀಡಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಡೀಸಿ `ನೀಟ್ ಪರೀಕ್ಷೆಗೆ 537 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ಒದಗಿಸಬೇಕು. ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಆಗಮಿಸಲು ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು. ಮಳೆ ಪ್ರಾರಂಭವಾಗಿರುವುದರಿAದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.
ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಸಾಗಾಟದ ವಾಹನಗಳಿಗೆ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು `ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜಿಸಬೇಕು’ ಎಂದರು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯಲ್ಲಿ ಯಾವುದೇ ಲೋಪಗಳು ಕಂಡುಬಾರದAತೆ ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಹಾಗೂ ವಿವಿಧ ಇಲಾಖೆಗಳು ಪರೀಕ್ಷೆಯ ಅವಧಿಯಲ್ಲಿ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಜಿ ಪಂ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜಿನ ಪ್ರಾಂಶುಪಾಲೆ ಗೀತಾ ವಾಲೀಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಇದ್ದರು.